ಮಡಿಕೇರಿ, ಫೆ. ೨೬: ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ತಮ್ಮದೇ ಆದ ಕೊಡುಗೆಯನ್ನು ಅವರು ಸಮಾಜಕ್ಕೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಯಿ ಜೀಜಾಬಾಯಿ ಅವರ ಕಥೆಯನ್ನು ಕೇಳಿ ಬೆಳೆದ ಶಿವಾಜಿ ಅವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಉದ್ದೇಶದಿಂದ ಇಡೀ ಭರತ ಸಾಮ್ರಾಜ್ಯವನ್ನು ಕಟ್ಟಲು ಪ್ರಯತ್ನಿಸುತ್ತಾರೆ ಎಂದರು.

ಸೋಮನಾಥ ನಂದಪುರಿ ಮಾತನಾಡಿ, ಶಿವಾಜಿ ಅವರು ಭರತ ಭೂಮಿಯಲ್ಲಿ ಜನಿಸಿ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದರು. ಛತ್ರಪತಿ ಶಿವಾಜಿ ಮಹಾರಾಜರು ಭರತ ಖಂಡದ ಅನರ್ಘö್ಯ ರತ್ನ ಎಂದು ವರ್ಣಿಸಿದರು.

ಮರಾಠ ಸಮಾಜದ ಜಿಲ್ಲಾಧ್ಯಕ್ಷ ಎಸ್.ಆರ್. ಅರುಣ್ ರಾವ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ತಹಶೀಲ್ದಾರ್ ಶ್ರೀಧರ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಪ್ರಮುಖರಾದ ಸುನಿಲ್ ರಾವ್, ನೇಕಾರರ ಒಕ್ಕೂಟದ ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಸ್ವಾಗತಿಸಿದರು. ಕಲಾವತಿ ಮತ್ತು ತಂಡದವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.