ಕಣಿವೆ, ಮಾ. ೨೫: ತಾ.೨೭ ರಂದು ಐತಿಹಾಸಿಕ ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ ನಡೆಯುವ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ನಿರೀಕ್ಷೆ ಇದ್ದು, ರಥೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ದೇವಾಲಯ ಸಮಿತಿ ಹಾಗೂ ಪೊಲೀಸರು ಜಂಟಿಯಾಗಿ ಸುರಕ್ಷತಾ ಕ್ರಮಗಳ ಕುರಿತು ಕಣಿವೆಯ ದೇವಾಲಯದ ಆವರಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿದರು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್ ರಥೋತ್ಸವದ ಹಿನ್ನೆಲೆ ಸಮಿತಿ ವತಿಯಿಂದ ಕೈಗೊಂಡ ಕ್ರಮಗಳು ಹಾಗೂ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರಯು. ಕೊಡಗು ಸೇರಿದಂತೆ ನೆರೆಯ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗುವ ಕಾರಣ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಮಾಹಿತಿ ನೀಡಿದರು.
ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಸೇತುವೆ ಮೇಲೆ ಹೋಗಿ ನಿಲ್ಲದಂತೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವ ಬಗ್ಗೆ ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ ಮಾಹಿತಿ ನೀಡಿದರು. ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಮಾಧವ, ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಮಧು, ಮೋಹನ್ ಮೊದಲಾದವರಿದ್ದರು. ರಥೋತ್ಸವದ ಹಿನ್ನೆಲೆಯಲ್ಲಿ ತಾ.೨೫ ರ ಬುಧವಾರದಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿಗಳು ಆರಂಭಗೊAಡವು. ಬೆಳಗ್ಗೆ ದೇವಾನಂದಿ, ಅಂಕುರಾರ್ಪಣ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ಜಪ, ಅಭಿಷೇಕ, ಪುಣ್ಯಾಹವಾಚನ, ಗಣಪತಿ ಹೋಮ, ದೇವತಾಹ್ವಾನ, ಮಹಾಪೂಜೆ ನೆರವೇರಿದವು.