ಮಡಿಕೇರಿ, ಮೇ ೧೨: ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದ್ದು, ಆ ದಿಸೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಮುಂಗಾರು ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಶೇ. ೫೦ಕ್ಕಿಂತಲೂ ಕಡಿಮೆ ಮಳೆ ಆಗಿದೆ. ಆದರೂ ಸಹ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಈ ಹಿಂದಿನAತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶ ಸೇರಿದಂತೆ ಸೂಕ್ಷö್ಮ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು.

ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ. ಇಒಗಳು, ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸ್ಥಳೀಯ ಇಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.

ತಾಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ಸಭೆ ನಡೆಸಬೇಕಿದ್ದು, ಆ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿಯೂ ಸಹ ಸಭೆ ನಡೆಸಿ ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರವಹಿಸಲು ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ ಸುಸ್ಥಿತಿ ಬಗ್ಗೆ ವರದಿ ನೀಡಬೇಕು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರವಿದ್ದು, ತಾಲೂಕು ಮಟ್ಟದಲ್ಲಿಯೂ ಸಹ ಸಹಾಯವಾಣಿ ಕೇಂದ್ರ ಆರಂಭಿಸಬೇಕು. ಮಳೆಗಾಲದ ಅವಧಿಯಲ್ಲಿ ಸಹಾಯವಾಣಿ ಕೇಂದ್ರದಲ್ಲಿ ದಿನದ ೨೪ ಗಂಟೆ ಅವಧಿಯಲ್ಲಿ ಮೂರು ಪಾಳಿಯಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು.

ಈಗಾಗಲೇ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ (ಜಿಎಸ್‌ಐ) ನೀಡಿರುವ ಮಾಹಿತಿಯಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಪೌರಾಡಳಿತ, ನಗರಾಭಿವೃದ್ಧಿ, ಸೆಸ್ಕ್, ಅರಣ್ಯ, ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಾನಿಗೆ ಸಂಬAಧಿಸಿದAತೆ ಆಯಾಯ ಸಂದರ್ಭ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.

ವಿದ್ಯುತ್ ಕಂಬ ಬದಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೋಮಶೇಖರ್ ಸೂಚಿಸಿದರು. ಪ್ರವಾಹಪೀಡಿತ ಹಾಗೂ ಸೂಕ್ಷö್ಮ ಪ್ರದೇಶದಲ್ಲಿನ ಕುಟುಂಬಗಳ ಬಗ್ಗೆ ಮಾಹಿತಿ ಇರಬೇಕು. ಹೆಚ್ಚಿನ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು.

ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್ ಸಂಸ್ಥೆ, ಮಾಜಿ ಸೈನಿಕರು, ಸ್ವಯಂ ಪ್ರೇರಣೆಯಿಂದ ಪ್ರಾಕೃತಿಕ ವಿಕೋಪ ನಿರ್ವಹಣಾ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳುವವರ ಸಹಕಾರವನ್ನು ಪಡೆಯುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಮತ್ತಿತರ ಮೂಲ ಸೌಲಭ್ಯ ಇರಬೇಕು. ಕೆಲವು ಸಂದರ್ಭದಲ್ಲಿ ಮಾರುತಗಳ ಅಲೆಯಿಂದಾಗಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆಯು ಸಹ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು.

ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಅಗತ್ಯ ಔಷಧಿ ದಾಸ್ತಾನು ಇರಬೇಕು. ‘ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸಂದೇಶಗಳು ಹೋಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಕಾಲಕಾಲಕ್ಕೆ ಮಾಹಿತಿ ನೀಡಲಾಗುವುದು. ಜನ-ಜಾನುವಾರು ರಕ್ಷಣೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾತನಾಡಿ, ಈಗಾಗಲೇ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಪೊಲೀಸ್ ಇಲಾಖೆಯಿಂದ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಅಗ್ನಿಶಾಮಕ, ಅರಣ್ಯ, ವಿದ್ಯುತ್ ಇಲಾಖೆ ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಸ್ಥಳೀಯವಾಗಿ ಪೊಲೀಸ್ ಠಾಣಾ ಅಧಿಕಾರಿ ಜೊತೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಳೆಗಾಲದಲ್ಲಿ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಗಂಬೂಟ್, ಲೈಫ್ ಜಾಕೆಟ್, ಟಾರ್ಚ್ ಮತ್ತಿತರ ವಸ್ತುಗಳು ಜೊತೆಯಲ್ಲಿ ಇರಬೇಕು. ಜೆಸಿಬಿ, ಕ್ರೇನ್, ಜೀಪು, ಮತ್ತಿತರ ಸಂಬAಧ ಸ್ಥಳೀಯವಾಗಿ ವಾಹನ ಮಾಲೀಕರ ದೂರವಾಣಿ ಸಂಖ್ಯೆಗಳನ್ನು ಜತನ ಮಾಡಿಕೊಂಡಿರಬೇಕು. ನೋಡಲ್ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಬೇಕು ಎಂದರು.

ಜಿ.ಪA. ಸಿಇಓ ಆನಂದ ಪ್ರಕಾಶ್ ಮೀನಾ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಒಂದು ರೀತಿ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಒಂದು ಕಡೆ ಅನಾವೃಷ್ಠಿ, ಮುಂದಿನ ದಿನಗಳಲ್ಲಿ ಅತಿವೃಷ್ಠಿಯೂ ಸಂಭವಿಸಬಹುದು, ಹೀಗೆ ಎರಡರ ಬಗ್ಗೆಯೂ ಸಹ ಅವಲೋಕನ ಮಾಡಬೇಕಿದೆ.

ತಾಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸಿ, ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸಂಜನಾ, ಶ್ರೀಧರ, ಸೆಸ್ಕ್ ಇಇ ರಾಮಚಂದ್ರ, ಲೋಕೋಪಯೋಗಿ ಇಲಾಖೆ ಇಇ ಕೆ.ಟಿ. ಪ್ರಭು, ಜಿ.ಪಂ. ಇಇ ಜಿ.ಕೆ. ನಾಯಕ್, ಡಿ.ವೈ.ಎಸ್.ಪಿ. ಐ.ಪಿ. ಮೇದಪ್ಪ, ತಾ.ಪಂ. ಇಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಹಲವು ಮಾಹಿತಿ ನೀಡಿದರು.