ಸೋಮವಾರಪೇಟೆ, ಮೇ ೧೨: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ೧೨ ನೇ ದಿನಕ್ಕೆ ಕಾಲಿಟ್ಟಿದೆ.
ಸಂಘಟನೆಯ ಅಧ್ಯಕ್ಷ ಕೆ. ಮೊಣ್ಣಪ್ಪ ಮಾತನಾಡಿ, ಮಾದಾಪುರ ಪಿಡಿಒ ಅವರು ಮಂಗಳವಾರ ಕರೆ ಮಾಡಿ ಕೆಲವು ಮಾಹಿತಿಯನ್ನು ನೀಡಿದ್ದಾರೆ. ಬುಧವಾರದಂದು ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಧರಣಿ ನಡೆಸುತ್ತಿರುವ ಕುಂಬೂರು ಸ.ನಂ೧೨೫/೧ ಮತ್ತು ೨೨/೧ ಜಾಗದ ಸರ್ವೆ ಮಾಡಲು ಬರುತ್ತಾರೆ ಎಂದು ತಿಳಿಸಿದ್ದಾರೆ. ೪೦/೧ ರಲ್ಲಿ ೪.೪೬ ಎಕರೆ ಪೈಸಾರಿ ಜಾಗವಿರುವ ಬಗ್ಗೆ ತಿಳಿದು ಬಂದಿದ್ದು, ಆ ಜಾಗವನ್ನು ಗುರುತಿಸಿ ಧರಣಿ ನಿರತರಿಗೆ ನಿವೇಶನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ತಾಲೂಕಿನಲ್ಲಿರುವ ಪೈಸಾರಿ ಜಾಗವನ್ನು ಗುರುತಿಸಿ, ನಿವೇಶನ ರಹಿತ ಕಾರ್ಮಿಕರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.