ಮಡಿಕೇರಿ, ಮೇ ೨೨: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.
ನೆಲ್ಲಿಹುದಿಕೇರಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಪ್ರತಿ ಗ್ರಾಮಕ್ಕೂ ಮೂಲ ಸೌಕರ್ಯಗಳನ್ನು ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.
ಮೂರು ವರ್ಷದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯವಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಜನರು ಅಭಿವೃದ್ಧಿ ಸಾಧಿಸಿ ಮುಂದೆ ಬರಬೇಕೆಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದರು. ಜಿಲ್ಲೆಯ ಇಬ್ಬರು ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಗ್ರಾಮಮಟ್ಟದಲ್ಲೇ ಮೂಲ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಜಾತಿ, ಮತಭೇದವಿಲ್ಲದೆ ಎಲ್ಲಾ ಸಮುದಾಯಗಳಿಗೂ ಅನುಕೂಲವಾಗುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಶಾಸಕರ ಜನಪರ ಕಾಳಜಿಗೆ ಗ್ರಾಮಸ್ಥರೇ ಅಭಿನಂದನೆ ಸಲ್ಲಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಪ್ರದೇಶಗಳಲ್ಲಿ ಇದೀಗ ಮೂಲ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಶಾಸಕ ಮಂತರ್ ಗೌಡ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ಯೋಜನೆಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಠಾನಗೊಳಿಸಿರುವುದರಿಂದ ಜನರ ಬಹುದಿನಗಳ ಬೇಡಿಕೆಗಳು ಈಡೇರಿವೆ ಎಂದು ತಿಳಿಸಿದರು.
ಇದೇ ಸಂದರ್ಭ ವಿವಿಧ ಸಂಘ-ಸAಸ್ಥೆಗಳು, ವಾರ್ಡ್ ನಿವಾಸಿಗಳು ಹಾಗೂ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹನೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗಿಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಎಂ.ಕೆ. ಹಕೀಂ, ಧನಲಕ್ಷಿö್ಮ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸೈಯ್ಯದ್ ಬಾವ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಸಮಿತಿ ಸದಸ್ಯ ಕೆ.ಎಂ. ಬಷೀರ್, ಜೋಸೆಫ್ ಶ್ಯಾಮ್, ಪ್ರಮುಖರಾದ ಎಸ್ ದೂಲ್‌ಪಾಡಿ, ಮುಸ್ತಫ, ಅನೀಫ್, ವಸಂತ್ ಕುಮಾರ್ ಹೊಸಮನೆ, ಪ್ರಮೀಳಾ, ಕೆ.ಎಂ. ಮುಸ್ತಫ, ಅಪ್ಸಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು, ಪಂಚಾಯಿತಿ ಮಾಜಿ ಸದಸ್ಯರುಗಳು ಹಾಜರಿದ್ದರು.