ಶನಿವಾರಸಂತೆ, ಮೇ ೩೧: ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕ ಗುಣಗಳು, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು. ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಶಿಕ್ಷಣ ಎಂದರೆ ಕೇವಲ ಓದುವುದು ಮತ್ತು ಅಂಕಗಳಿಸುವುದು ಮಾತ್ರವಲ್ಲ; ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಮಾರ್ಗದರ್ಶಕರಾಗಿ ಬೆಳೆಯಬೇಕು. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು. ಉತ್ತಮ ಆರೋಗ್ಯ ಮತ್ತು ಕ್ರೀಡಾ ಮನೋಭಾವ ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆಗೆ ಅತ್ಯಗತ್ಯವಾಗಿದೆ ಎಂದರು.
ಮನೆಹಳ್ಳಿಮಠ ತಪೋವನ ಕ್ಷೇತ್ರದ ಮಹಾಂತಶಿವಲಿAಗ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಶಿಸ್ತು, ಸೇವಾ ಮನೋಭಾವ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು. ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿ, ಕರ್ನಾಟಕದಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಶೈಕ್ಷಣಿಕ ಸಂಘ-ಸAಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ರಾಜ್ಯವು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದರು.
ಬಿಗ್‌ಬಾಸ್ ಖ್ಯಾತಿಯ ಕಲಾವಿದ ಧ್ರುವಂತ್ ಬಾಲಾಜಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಪರಿಶ್ರಮ, ಆತ್ಮವಿಶ್ವಾಸ ಹಾಗೂ ನಿರಂತರ ಪ್ರಯತ್ನ ಅಗತ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಮುನ್ನಡೆಯಬೇಕು ಎಂದರು.
ಪ್ರೌಢಶಾಲಾ ವಿಭಾಗದಲ್ಲಿ ೩೨ ವರ್ಷಗಳು ಕರ್ತವ್ಯ ನಿರ್ವಹಿಸಿ ನಿವೃತ್ತರಾಗುತ್ತಿರುವ ಹಿರಿಯ ಶಿಕ್ಷಕ ಎಂ.ಎಸ್. ಅಬ್ದುಲ್ ರಬ್ ಅವರನ್ನು ಸನ್ಮಾನಿಸಿ ಮಾತನಾಡಿದ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್.ಚಂದ್ರಮೌಳಿ, ಅಬ್ದುಲ್ ರಬ್ ಆದರ್ಶ ಶಿಕ್ಷಕರಾಗಿ ಗುರುತಿಸಿಕೊಂಡಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದರು.ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗು ಭಾಜನರಾಗಿದ್ದರು ಎಂದು ಹೇಳಿದರು. ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಹಾಗೂ ವಕೀಲ ಜಗದೀಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷ ಜಿ.ಪಿ.ಶಂಭುಲಿAಗಪ್ಪ, ಕಾರ್ಯದರ್ಶಿ ಕೆ.ಎನ್. ಪರಮೇಶ್, ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕರಾದ ಜಿ.ಪಿ. ಶಿವಕುಮಾರ್, ಬಿ.ಕೆ. ಯತೀಶ್, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕೆ.ಕೆ. ಅಭಿಲಾಷ್ ಸ್ವಾಗತಿಸಿ, ರೇಣುಕಾ ವಂದಿಸಿ, ಕೆ.ಎಚ್. ಯೋಗೇಂದ್ರ ನಿರೂಪಿಸಿದರು.