ಕರಿಕೆ, ಜೂ. ೧೮: ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಪತ್ತು ನಿರ್ವಹಣಾ ಸಮಿತಿ (ಟಾಸ್ಕ್ಫೋರ್ಸ್) ಸಭೆ ಪಂಚಾಯಿತಿ ಆಡಳಿತಾಧಿಕಾರಿ ಅಬ್ದುಲ್ ನಬೀ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಬ್ದುಲ್ ನಬೀ, ಗ್ರಾಮ ಮಟ್ಟದ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ವಿಪತ್ತು ನಿರ್ವಹಣೆಗೆ ಸಜ್ಜಾಗಬೇಕು ಎಂದು ಸೂಚಿಸಿದರು. ಅಲ್ಲದೆ, ಆರೋಗ್ಯ ಕೇಂದ್ರದಲ್ಲಿ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ದಾಸ್ತಾನು ಇಡುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.
ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ ನಾಯರ್ ಮಾತನಾಡಿ, ಶಾಲೆಗಳು ಹಾಗೂ ಅಂಗನವಾಡಿಗಳ ಆವರಣದಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸಿ ತಕ್ಷಣ ತೆರವುಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ರಸ್ತೆಗಳಿಗೆ ಮರಗಳು ಅಥವಾ ಬಂಡೆಗಳು ಕುಸಿದಲ್ಲಿ ಕೂಡಲೇ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಸಂದರ್ಭದಲ್ಲಿ ತ್ವರಿತ ದುರಸ್ತಿಗೆ ಅನುಕೂಲವಾಗುವಂತೆ ಕರಿಕೆಯಲ್ಲಿ ವಿದ್ಯುತ್ ಕಂಬಗಳು ಹಾಗೂ ಅಗತ್ಯ ಪರಿಕರಗಳನ್ನು ಮುಂಚಿತವಾಗಿ ದಾಸ್ತಾನಿಡುವಂತೆ ತಿಳಿಸಿದರು. ಸಾರ್ವಜನಿಕರ ಆಸ್ತಿ-ಪಾಸ್ತಿಗೆ ಹಾನಿಯಾದರೆ ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದೇ ವೇಳೆ, ಆನೆ ಸೇರಿದಂತೆ ಕಾಡುಪ್ರಾಣಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.