ಐಗೂರು, ಜೂ. ೧೮: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಬಿರಿ ಪೈಸಾರಿಗೆ ಸಮಾಜ ಕಲ್ಯಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯ ನಿವಾಸಿಗಳು ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಹಿನ್ನೆಲೆ ಅವರ ನಿರ್ದೇಶನದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿದ್ದೇಗೌಡ ಅವರು ಪೈಸಾರಿ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು ಹತ್ತು ವರ್ಷಗಳಿಂದ ಅರ್ಧಕ್ಕೆ ನಿಂತುಹೋಗಿದ್ದ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ ರಸ್ತೆ ಅಭಿವೃದ್ಧಿ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭ ಐಗೂರು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆಟಕೋಯ, ಸಲೀಂ ಹೊಸತೋಟ, ಸುಧಾಕರ, ಯೋಗೇಶ್ ಹಾಗೂ ಚಂದ್ರ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.