ಕೂಡಿಗೆ, ಜೂ. ೧೮: ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ರಾಮಚಂದ್ರ ಹೇಳಿದರು. ಕುಶಾಲನಗರ-ಹಾಸನ ಮುಖ್ಯರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ವಿಶೇಷ ವಾಹನ ತಪಾಸಣೆ ನಡೆಸಿ, ವಾಹನ ಚಾಲಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಿದರು. ತಪಾಸಣೆ ವೇಳೆ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರುವ ಬಗ್ಗೆ ಪರಿಶೀಲನೆ ನಡೆಸಿದ ಸಿಬ್ಬಂದಿ, ಸೀಟ್‌ಬೆಲ್ಟ್ ಬಳಕೆ, ವಾಹನಗಳ ದಾಖಲೆ ಪತ್ರಗಳು ಸೇರಿದಂತೆ ಇತರೆ ಸುರಕ್ಷತಾ ನಿಯಮಗಳನ್ನೂ ಪರಿಶೀಲಿಸಿದರು. ನಿಯಮ ಉಲ್ಲಂಘಿಸುವುದರಿAದ ಸಂಭವಿಸಬಹುದಾದ ಅಪಾಯಗಳ ಬಗ್ಗೆ ವಾಹನ ಚಾಲಕರಿಗೆ ಮಾಹಿತಿ ನೀಡಿ, ಸಂಚಾರ ಸುರಕ್ಷತೆಗೆ ಸಹಕರಿಸುವಂತೆ ಮನವಿ ಮಾಡಿದರು. ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಠಾಣಾಧಿಕಾರಿ ಸ್ವಾಮಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.