ಮಡಿಕೇರಿ, ಜೂ. ೧೯: ಮಡಿಕೇರಿ ಹೊರವಲಯದ ಕರ್ಣಂಗೇರಿ ಗ್ರಾಮದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಮೃತಪಟ್ಟ ಘಟನೆ ನಡೆದಿದೆ. ಮೂರ್ನಾಡು ಸಮೀಪದ ಎಂ. ಬಾಡಗ ನಿವಾಸಿ ಹರೀಶ್ (೪೭) ಮೃತ ವಿಚಾರಣಾಧೀನ ಖೈದಿಯಾಗಿದ್ದಾರೆ.

ಹರೀಶ್ ವಿರುದ್ಧ ೨೦೨೬ರ ಏಪ್ರಿಲ್ ೩ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿದ್ದು, ಬಳಿಕ ನ್ಯಾಯಾಂಗ ಬಂಧನಕ್ಕೊಳಗಾಗಿ ಜಿಲ್ಲಾ ಕಾರಾಗೃಹದಲ್ಲಿದ್ದರು. ಬುಧವಾರ ರಾತ್ರಿ ಎಂದಿನAತೆ ಊಟ ಸೇವಿಸಿ ಮಲಗಿದ್ದ ಹರೀಶ್, ಗುರುವಾರ ಬೆಳಗ್ಗೆ ತಡವಾದರೂ ಎಚ್ಚರವಾಗದ ಹಿನ್ನೆಲೆಯಲ್ಲಿ ಸಹ ಖೈದಿಗಳು ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ದೊರೆಯದ ಕಾರಣ ಜೈಲು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಜೈಲು ಸಿಬ್ಬಂದಿ ಅಧಿಕಾರಿಗಳ ಸಮ್ಮುಖದಲ್ಲಿ ಹರೀಶ್ ಅವರನ್ನು ಪರಿಶೀಲಿಸಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದರು. ನ್ಯಾಯಾಂಗ ಬಂಧನದಲ್ಲಿದ್ದ ಕೈದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಸಿಬ್ಬಂದಿ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲು ಅಧಿಕಾರಿಗಳು, ಸಿಬ್ಬಂದಿ ಹಾಗೂ ಹರೀಶ್ ಜೊತೆಗೆ ಬ್ಯಾರಕ್‌ನಲ್ಲಿದ್ದ ಇತರ ವಿಚಾರಣಾಧೀನ ಖೈದಿಗಳಿಂದ ಮಾಹಿತಿ ಪಡೆದು ಸ್ಥಳ ಮಹಜರು ನಡೆಸಿದರು. ಬಳಿಕ ನ್ಯಾಯಾಧೀಶರ ಆದೇಶದಂತೆ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಸಾವಿನ ನಿಖರ ಕಾರಣ ತಿಳಿಯಲಿದ್ದು, ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.