ಮಡಿಕೇರಿ, ಜೂ. ೧೯: ಜಿಲ್ಲೆಯಲ್ಲಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುರ್ತು ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಗುರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ನೀರಿನ ಸಂಗ್ರಹಣಾ ಕೇಂದ್ರಗಳು ಹಾಗೂ ನೀರಿನ ಮೂಲಗಳ ಸ್ವಚ್ಛತೆಗೆ ಆದ್ಯತೆ ನೀಡಿ, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದAತೆ ಕ್ರಮವಹಿಸಬೇಕು ಎಂದು ಅವರು ನಿರ್ದೇಶಿಸಿದರು.

ಸಭೆಯಲ್ಲಿ ಪ್ರಸಕ್ತ ಸಾಲಿನ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ, ಎಸ್‌ಡಿಪಿ ಹಾಗೂ ನಾನ್-ಎಸ್‌ಡಿಪಿ ಯೋಜನೆಗಳ ಪರಿಷ್ಕರಣೆ, ಜಲಜೀವನ್ ಮಿಷನ್ ಕಾಮಗಾರಿಗಳ ಪ್ರಗತಿ ಹಾಗೂ ಕುಂದುಕೊರತೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್. ಭಾಸ್ಕರ್ ಮಾತನಾಡಿ, ಜಿಲ್ಲೆಯಾದ್ಯಂತ ಮೂರು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾದ ೪೫೭ ಜಲಜೀವನ್ ಮಿಷನ್ ಕಾಮಗಾರಿಗಳ ಪೈಕಿ ೩೭೦ ಕಾಮಗಾರಿಗಳು ಪೂರ್ಣಗೊಂಡಿದ್ದು, ೮೫ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಯೋಜನೆಗೆ ಒಟ್ಟು ೩೫೪.೭೪ ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಇದುವರೆಗೆ ೨೪೫.೮೫ ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಪೂರ್ಣಗೊAಡ ಕಾಮಗಾರಿಗಳಲ್ಲಿ ೨೩೬ ಯೋಜನೆಗಳನ್ನು ಈಗಾಗಲೇ ಸಾರ್ವಜನಿಕ ಬಳಕೆಗೆ ಹಸ್ತಾಂತರಿಸಲಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೨೪೫ ಕಾಮಗಾರಿಗಳ ಪೈಕಿ ೨೨೯, ವೀರಾಜಪೇಟೆಯಲ್ಲಿ ೧೨೨ ಕಾಮಗಾರಿಗಳ ಪೈಕಿ ೮೧ ಹಾಗೂ ಮಡಿಕೇರಿ ತಾಲೂಕಿನಲ್ಲಿ ೯೦ ಕಾಮಗಾರಿಗಳ ಪೈಕಿ ೬೦ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ, ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳಲ್ಲಿ ೨೦೨೫-೨೬ನೇ ಸಾಲಿನಲ್ಲಿ ಎಂಟು ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಗುರುತಿಸಲಾಗಿದ್ದು, ಹೊಸ ಕೊಳವೆಬಾವಿ ಕೊರೆಯುವುದು, ಪಂಪ್ ಹಾಗೂ ಮೋಟಾರ್ ಅಳವಡಿಕೆ ಮತ್ತು ಪೈಪ್‌ಲೈನ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ಕೈಗೊಳ್ಳಲಾಗಿದೆ ಎಂದು ಹೇಳಿದರು.

ನೀರಿನ ಗುಣಮಟ್ಟ ಪರೀಕ್ಷೆಗೆ ಸಂಬAಧಿಸಿದAತೆ, ೨೦೨೬-೨೭ನೇ ಸಾಲಿನಲ್ಲಿ ಜೂನ್ ೧೮ರವರೆಗೆ ಜಿಲ್ಲೆಯ ೨೮೮ ಗ್ರಾಮಗಳಿಂದ ೧,೦೨೨ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಕೇವಲ ಎರಡು ಮಾದರಿಗಳಲ್ಲಿ ಕಲುಷಿತತೆ ಪತ್ತೆಯಾಗಿದ್ದು, ತಕ್ಷಣವೇ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗ್ರಾಮೀಣ ಭಾಗಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ನೀರಿನ ಸುರಕ್ಷತೆ ಕಾಪಾಡಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜವಾಹರ್ ನವೋದಯ ಶಾಲೆಗೆ ೭೮.೫೦ ಲಕ್ಷ ವೆಚ್ಚದಲ್ಲಿ ಹೊಸ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ, ವಾಟರ್ ಬಜೆಟ್, ೨೦ ಓವರ್‌ಹೆಡ್ ಟ್ಯಾಂಕ್‌ಗಳ ದುರಸ್ತಿ ಹಾಗೂ ಸಿಬ್ಬಂದಿ ಮುಂದುವರಿಕೆ ಕುರಿತೂ ಚರ್ಚಿಸಲಾಯಿತು.

ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಟಿ.ಪಿ. ವಿರೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ. ಸನತ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಸನ್ನಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.