ವೀರಾಜಪೇಟೆ, ಜೂ. ೧೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವೀರಾಜಪೇಟೆ ವತಿಯಿಂದ ತಿತಿಮತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠ್ಠಲ್ ಶಿವಪ್ಪ ಸಾಲಿಯಾನ್ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಮನುಷ್ಯ ಹಾಗೂ ಪ್ರಾಣಿಗಳ ಬದುಕಿಗೆ ಪರಿಸರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಸುತ್ತಮುತ್ತಲಿನ ಔಷಧೀಯ ಸಸ್ಯಗಳ ಮಹತ್ವವನ್ನು ತಿಳಿದುಕೊಂಡು ಅವುಗಳನ್ನು ಸಂರಕ್ಷಿಸಬೇಕು. ಶಾಲಾ ಆವರಣ ಹಾಗೂ ಮನೆಗಳ ಸುತ್ತಮುತ್ತ ಹೆಚ್ಚಿನ ಗಿಡಗಳನ್ನು ನೆಟ್ಟು, ಪರಿಸರವನ್ನು ಸ್ವಚ್ಛವಾಗಿ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ನಿರ್ಮಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ, ಒಕ್ಕೂಟದ ಅಧ್ಯಕ್ಷ ಶೇಖರ್, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಅನೂಪ್ ಕುಮಾರ್, ಸೇವಾ ಪ್ರತಿನಿಧಿ ಸರೋಜಾ, ವಲಯ ಮೇಲ್ವಿಚಾರಕಿ ಗೀತಾ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಕೃಷಿ ಮೇಲ್ವಿಚಾರಕ ವಸಂತ್, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭ ಪರಿಸರ ಜಾಗೃತಿಯ ಅಂಗವಾಗಿ ಆಯೋಜಿಸಿದ್ದ ಪ್ರಬಂಧ, ಚಿತ್ರಕಲೆ ಹಾಗೂ ಎಲೆಗಳನ್ನು ಗುರುತಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.