ಕೆ.ಕೆ. ನಾಗರಾಜಶೆಟ್ಟಿ

ಕೂಡಿಗೆ, ಜೂ. ೨೫: ಜೂನ್ ತಿಂಗಳು ಮಳೆಗಾಲವಾಗಿದ್ದರೂ ಕುಶಾಲನಗರ ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ನೂರಾರು ರೈತರ ಕೊಳವೆ ಬಾವಿಗಳಲ್ಲಿ ನೀರಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳ ಜೊತೆಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಕುಶಾಲನಗರ ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು ಆರೆಮಲೆನಾಡು ಪ್ರದೇಶಗಳಾಗಿದ್ದು, ಇಲ್ಲಿನ ರೈತರು ಮಳೆಯನ್ನೇ ಅವಲಂಬಿಸಿ ಕೃಷಿ ನಡೆಸುತ್ತಿದ್ದಾರೆ. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಹಾಗೂ ಸಣ್ಣ ಪ್ರಮಾಣದ ನೀರಾವರಿ ಉದ್ದೇಶಕ್ಕಾಗಿ ವಿವಿಧ ಸರ್ಕಾರಿ ಯೋಜನೆಗಳಡಿ ಕೊಳವೆ ಬಾವಿಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ವರ್ಷ ಮಳೆಯ ಕೊರತೆಯಿಂದ ಹಲವು ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ತೀವ್ರವಾಗಿ ಕುಸಿದಿದ್ದು, ನೀರು ಮೇಲಕ್ಕೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಸೀಗೆಹೊಸೂರು, ಬಸಿರಿನಗೊಪ್ಪೆ, ಅಳುವಾರ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕೊಳವೆ ಬಾವಿಗಳಿಗೆ ಅಳವಡಿಸಿರುವ ಪಂಪ್‌ಸೆಟ್‌ಗಳು ನೀರಿನ ಕೊರತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಪ್ರಸಕ್ತ ಪರಿಸ್ಥಿತಿ ಮುಂದುವರಿದರೆ ಇನ್ನಷ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ಸಂಬAಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಕೊಳವೆ ಬಾವಿಗಳ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಳೆ ಕೊರತೆ ಮುಂದುವರಿದರೆ ಕೃಷಿ ಚಟುವಟಿಕೆಗಳ ಜೊತೆಗೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಯೂ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.