ಮಡಿಕೇರಿ, ಜೂ. ೨೬: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕೇಂದ್ರ ಸರಕಾರದ ಬೇಜವಾಬ್ದಾರಿ ಕಾರಣವಾಗಿದ್ದು, ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗಿ ಭವಿಷ್ಯ ಹಾಳಾಗಿದೆ.

ಕಳೆದ ೧೦ ವರ್ಷಗಳಲ್ಲಿ ೮೫ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ದೇಶದಲ್ಲಿ ನಡೆದಿವೆ ಎಂದು ಮಾಧ್ಯಮದ ವರದಿಯಿಂದ ಬಯಲಾಗಿದೆ.

ಕೋಟ್ಯಂತರ ವಿದ್ಯಾರ್ಥಿಗಳು ಇದರಿಂದ ಬಾಧಿತರಾಗಿದ್ದು, ಕೇಂದ್ರ ಸರಕಾರ ಇದನ್ನು ತಡೆಗಟ್ಟಲು ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಮತದಾರರ ಪರಿಷ್ಕರಣೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಮತದಾನ ಹಕ್ಕು ಕಸಿಯುವ ಭೀತಿಯಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ನೋಂದಾವಣಿಗೊಳಿಸಿ ಕೊಳ್ಳುವಂತೆ ಧರ್ಮಜ ಮನವಿ ಮಾಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ರಾಷ್ಟಿçÃಯ ಪರೀಕ್ಷಾ ಏಜೆನ್ಸಿಯ ಲೋಪದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಇದು ಭಾರತ ಪರೀಕ್ಷೆ ವ್ಯವಸ್ಥೆಯ ಸಂಪೂರ್ಣ ವೈಫಲ್ಯವಾಗಿದೆ.

ಇದನ್ನು ಸರಿಪಡಿಸುವ ಕ್ರಮವನ್ನು ಕೇಂದ್ರ ಸರಕಾರ ಕೈಗೊಂಡಿಲ್ಲ. ಇದು ಕೇವಲ ಪ್ರಶ್ನೆಪತ್ರಿಕೆಯ ಸೋರಿಕೆಯಲ್ಲ. ಮಕ್ಕಳ ಭವಿಷ್ಯದ ಮೇಲಿನ ಚೆಲ್ಲಾಟ ಎಂದು ಕಿಡಿಕಾರಿದರು.

ಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್ ಹಾಜರಿದ್ದರು.