ಸಿದ್ದಾಪುರ, ಜೂ. ೨೮: ಗುಹ್ಯ, ಪಳ್ಳಕ್ಕರೆ ವ್ಯಾಪ್ತಿಯಲ್ಲಿ ಕಾಡಾನೆ ಗಳು ಬೀಡುಬಿಟ್ಟಿದ್ದು, ಕಾರ್ಮಿಕರು ಸೇರಿದಂತೆ ಸ್ಥಳೀಯರು ಆತಂಕಕ್ಕೆ ಸಿಲುಕಿದ್ದಾರೆ. ಕಳೆದ ಕೆಲವು ತಿಂಗಳುಗಳಿAದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟದಲ್ಲಿ ದಾಂಧಲೆ ನಡೆಸುತ್ತಿದೆ. ಗುಹ್ಯ ಗ್ರಾಮದ ಕಕ್ಕಟ್ಟುಕಾಡುವಿಗೆ ತೆರಳುವ ರಸ್ತೆಯ ದೇವರಕಾಡು ಬದಿಯಲ್ಲಿ ಕಾಡಾನೆಗಳು ಬೀಡುಬಿಡುತ್ತಿದ್ದು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಭಯದಿಂದಲೇ ಸಂಚರಿಸಬೇಕಾಗಿದೆ. ಅರಣ್ಯ ಇಲಾಖೆ ಕಾಡಾನೆಗಳನ್ನು ಓಡಿಸುವತ್ತ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪಳ್ಳಕ್ಕರೆ ಭಾಗದಲ್ಲೂ ಕಾಡಾನೆಗಳು ಬೀಡುಬಿಟ್ಟಿದ್ದು, ಇತ್ತೀಚೆಗೆ ಕಾರ್ಮಿಕ ಮಹಿಳೆಯ ಮೇಲೆ ದಾಳಿಗೆ ಮುಂದಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಹಿಳೆ ಪಾರಾಗಿದ್ದು, ಇದೀಗ ಕಾಡಾನೆಗಳು ಇದೇ ಭಾಗದಲ್ಲಿ ಓಡಾಡುತ್ತಿವೆ. ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ಶಾಶ್ವತವಾಗಿ ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.