ಮಡಿಕೇರಿ, ಜು. ೧೬: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭ ನೈಜ ಆದಿವಾಸಿಗಳು ಹಾಗೂ ಕಾರ್ಮಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಗಳು ಸಮನ್ವಯ ದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸೂಚಿಸಿದರು.

ನಗರದ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಅಧಿನಿಯಮ-೧೯೭೬ರ ಅನ್ವಯ ನಡೆದ ಉಪ ವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿ ತಾಲೂಕಿನಲ್ಲಿ ಕೈಗೊಂಡಿರುವ ಪ್ರಗತಿ ಪರಿಶೀಲನೆ ನಡೆಯಿತು. ವಿವಿಧ ಇಲಾಖೆಗಳ ಸಮನ್ವಯದಿಂದ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು. ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಶಿಬಿರಗಳ ಆಯೋಜನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ತಿಂಗಳಿಗೊಮ್ಮೆ ಸಂಬAಧಿತ ಇಲಾಖೆಗಳು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಅದರ ವರದಿಯನ್ನು ಮುಂದಿನ ಸಭೆಗೆ ಸಲ್ಲಿಸಬೇಕು. ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ನಿತಿನ್ ಚಕ್ಕಿ ತಿಳಿಸಿದರು.

ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಲೈನ್‌ಮನೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬ್ಯಾಂಕ್ ಖಾತೆ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ವಲಸೆ ಕಾರ್ಮಿಕರ ಬಗ್ಗೆ ಸಂಬAಧಿಸಿದ ಇಲಾಖೆಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎನ್. ಯತ್ನಟ್ಟಿ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಕಾರ್ಮಿಕರ ಮೇಲಿನ ದೌರ್ಜನ್ಯಕ್ಕೆ ಸಂಬAಧಿಸಿದ ದೂರುಗಳು ಬಂದರೆ ಸ್ಥಳ ಪರಿಶೀಲನೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಶ್ರೀಧರ, ತಾ.ಪಂ. ಇಒ ಶೇಖರ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಸಿರಾಝ್ ಅಹಮ್ಮದ್, ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ವೈ.ಎಂ. ಸುರೇಶ್, ಪ್ಲಾಂಟರ್ಸ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಸರಸ್ವತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.