ಮಡಿಕೇರಿ, ಜು. ೧೬: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದಿAದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿವಿಧ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಪ್ರಾಂಶುಪಾಲರ ಪೂರ್ಣ ಸಹಕಾರದೊಂದಿಗೆ ಕಳೆದ ಎರಡು ವರ್ಷದಲ್ಲಿ ೨೦೦ಕ್ಕೂ ಹೆಚ್ಚು ಹೊಸ ಸದಸ್ಯತ್ವ ಪಡೆದಿರುವುದಲ್ಲದೆ, ಕಾಲೇಜಿನ ಅಭಿವೃದ್ಧಿಗಾಗಿ ಹಲವು ಕಾಮಗಾರಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹಾಗೂ ಅವರ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಮುAದಿನ ಎರಡು ತಿಂಗಳಲ್ಲಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ, ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಎದುರಿಸಲು ಬೇಕಾದ ತರಬೇತಿ ಕಾರ್ಯಾಗಾರವನ್ನು ನಡೆಸುವಂತೆ ಹಾಗೂ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಹಾಗೂ ಇತರ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ನಡೆಸುವುದಾಗಿ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅವರು, ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಮೈದಾನ ಹಾಗೂ ಕಾಲೇಜಿನ ಸುತ್ತಮುತ್ತಲಿನ ಪ್ರಾದೇಶದಲ್ಲಿ ಸ್ವಚ್ಛತೆ ಕೈಗೊಳ್ಳಲಾಗಿದೆ. ಅಲ್ಲದೆ ಹಲವು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗಾಗಿ ನಡೆಸಿಕೊಟ್ಟಿರುವುದಲ್ಲದೆ, ಎನ್ಸಿಸಿ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ರೈಫಲ್ ರೆಂಜ್ ಅನ್ನು ಮಾಡಿಕೊಟ್ಟಿರುವುದು ಸಹಕಾರಿಯಾಗಿದೆ ಎಂದರು.
ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ೨೦೨೫-೨೬ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ವರದಿಯನ್ನು ಹಾಗೂ ರೈಫಲ್ ರೇಂಜ್ ಕಾಮಗಾರಿ ಹಾಗೂ ಕಾರ್ಯಕ್ರಮದ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕಿ ತೆನ್ನಿರಾ ಟೀನಾ ಚಂಗಪ್ಪನವರು ಹಳೆ ವಿದ್ಯಾರ್ಥಿಗಳ ಸಂಘಕ್ಕೆ ರೂ.೫೦೦೦ ನೀಡಿದರು.
ಸಂಘದ ನಿರ್ದೇಶಕರಾದ ಮಾಗಲು ಲೋಹಿತ್, ಬಿ.ಜಿ. ಹರ್ಷಿತ್, ಎಸ್.ಆರ್. ವತ್ಸಲಾ, ಕೆ.ಹೆಚ್.ಖುರ್ಷಿದ್ ಬಾನು, ಕೇಲೆಟ್ಟಿರ ದೇವಯ್ಯ, ಆಪಾಡಂಡ ಜಾನ್ಸಿ ಗಣಪತಿ, ಕರವಂಡ ಸೀಮಾ ಗಣಪತಿ, ಪೆಬ್ಬಟ್ಟಿರ ಶೀತಲ್ ಕಾರ್ಯಪ್ಪ, ಚರಣ್ ಬಲ್ಯದ, ಚೀಯಕಪೂವಂಡ ಸಚಿನ್ ಪೂವಯ್ಯ, ಕಾಲೇಜಿನ ಸಿಬ್ಬಂದಿಗಳಾದ ಪವಿತ್ರ, ರೇಷ್ಮ ಹಾಗೂ ಮತ್ತಿತರು ಇದ್ದರು.
ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಸ್ವಾಗತಿಸಿ, ಉಪಾಧ್ಯಕ್ಷ ಬೊಟ್ಟೊಳಂಡ ಗಣಪತಿ ವಂದಿಸಿದರು.