ನಾಪೋಕ್ಲು, ಜು. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಮಡಿಕೇರಿ ತಾಲೂಕು ವತಿಯಿಂದ ಕೋಪಟ್ಟಿ ಸಮುದಾಯ ಭವನದಲ್ಲಿ ಯಂತ್ರಶ್ರೀ ಭತ್ತ ನಾಟಿ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಶರತ್ ಕುಮಾರ್ ಅವರು ಯಂತ್ರಶ್ರೀ ಭತ್ತ ನಾಟಿ ಯಂತ್ರಗಳ ಕಾರ್ಯವೈಖರಿ, ಅವುಗಳ ಉಪಯೋಗ, ಕಾರ್ಮಿಕರ ಕೊರತೆಯನ್ನು ನಿವಾರಿಸುವಲ್ಲಿ ಯಾಂತ್ರೀಕರಣದ ಮಹತ್ವ ಹಾಗೂ ಆಧುನಿಕ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಮಡಿಕೇರಿ ತಾಲೂಕು ಕೃಷಿ ಇಲಾಖೆಯ ತಾಂತ್ರಿಕ ವಿಭಾಗದ ವ್ಯವಸ್ಥಾಪಕಿ ಮೋನಿಕಾ ಅವರು ಕೃಷಿ ಇಲಾಖೆಯಿಂದ ರೈತರಿಗೆ ಲಭ್ಯವಿರುವ ವಿವಿಧ ಸರ್ಕಾರಿ ಸೌಲಭ್ಯಗಳು, ಸಹಾಯಧನ ಯೋಜನೆಗಳು ಹಾಗೂ ಅವುಗಳನ್ನು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳುವ ಕುರಿತು ಸಮಗ್ರ ಮಾಹಿತಿ ನೀಡಿ, ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಪ್ರಗತಿಪರ ಕೃಷಿಕ ಸಿ.ಎಸ್. ಸುಭಾಷ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಆಧುನಿಕ ಕೃಷಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉತ್ಪಾದಕತೆ ಹೆಚ್ಚಿಸಿಕೊಳ್ಳುವಂತೆ ಕರೆ ನೀಡಿದರು.
ತರಬೇತಿಯಲ್ಲಿ ಭಾಗವಹಿಸಿದ್ದ ರೈತರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆದುಕೊಂಡು ತಮ್ಮ ಕೃಷಿಯಲ್ಲಿ ಯಾಂತ್ರೀಕೃತ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.
ಈ ಸಂದರ್ಭ ತಾಂತ್ರಿಕ ವಿಭಾಗದ ವ್ಯವಸ್ಥಾಪಕಿ ಮೋನಿಕಾ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಮೋನಿಷಾ, ಪ್ರಗತಿಪರ ಕೃಷಿಕ ಸಿ.ಎಸ್. ಸುಭಾಷ್, ಪ್ರಬಂಧಕ ಶರತ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿ ವಿದ್ಯಾ, ಮಡಿಕೇರಿ ಸೇವಾಪ್ರತಿನಿಧಿ ಅಣ್ಣಯ್ಯ, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.