*ಗೋಣಿಕೊಪ್ಪ, ಜು. ೨೧: ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ, ಮದ್ಯಪಾನ, ಧೂಮಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಬೇಕು ಎಂದು ಹಾಡಿ ನಿವಾಸಿಗಳಿಗೆ ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಸಲಹೆ ನೀಡಿದರು.

ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಗ್ರಾಮದ ಬಸವೇಶ್ವರ ನಗರ ಕಾಲೋನಿಯಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ನಿವಾಸಿಗಳಿಗಾಗಿ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮದೊಳಗೆ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬAದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು. ಸಾರ್ವಜನಿಕರ ಸಹಕಾರದಿಂದಲೇ ಅಪರಾಧ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಹಾಡಿಯ ಮುಖಂಡ ಗಪ್ಪು, ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರತಿದಿನ ಸುಮಾರು ೭ ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ತೀವ್ರವಾಗುತ್ತಿದ್ದು, ಕಳೆದ ವಾರ ಸುರಿದ ಮಳೆಯಿಂದ ಸೇತುವೆ ಮೇಲ್ಭಾಗದಲ್ಲಿ ನೀರು ಹರಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸಿದರು ಎಂದು ಹೇಳಿದರು.

ತಹಶೀಲ್ದಾರ್ ಅವರು ಮಳೆ ಸಂತ್ರಸ್ತರಿಗೆ ಅಗತ್ಯ ಪರಿಹಾರ ಕಿಟ್‌ಗಳನ್ನು ವಿತರಿಸುವ ಭರವಸೆ ನೀಡಿದ್ದರೂ, ಇದುವರೆಗೆ ಯಾವುದೇ ಕಿಟ್‌ಗಳು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಹಾಡಿಯ ನಿವಾಸಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.