ಮಡಿಕೇರಿ, ಜು. ೨೮: ತಂದೆ-ತಾಯಿ, ಅಜ್ಜ-ಅಜ್ಜಿ ಹಾಗೂ ಸಹೋದರ-ಸಹೋದರಿಯರಂತಹ ಪವಿತ್ರ ಸಂಬAಧಗಳನ್ನು ಕಡೆಗಣಿಸಲಾಗುತ್ತಿರುವ ಕಾಲಘಟ್ಟದಲ್ಲಿ ನಾವು ಬದುಕುತ್ತಿರುವುದು ಅತ್ಯಂತ ದೊಡ್ಡ ದುರಂತ ಎಂದು ತನಲ್ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ವಿಷಾದ ವ್ಯಕ್ತಪಡಿಸಿದರು.

ಸುಂಟಿಕೊಪ್ಪದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಶ್ರಮ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಕುಟುಂಬದ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿದಾಗ ಮಾತ್ರ ವೃದ್ಧಾಶ್ರಮಗಳ ಅವಶ್ಯಕತೆ ಕಡಿಮೆಯಾಗುತ್ತದೆ ಎಂದು ಹೇಳಿದರು.

ನಾವು ಕುಟುಂಬದ ಹಿರಿಯರನ್ನು ಎಲ್ಲಿಯವರೆಗೆ ಕಡೆಗಣಿಸುತ್ತೇವೆಯೋ ಅಲ್ಲಿಯವರೆಗೆ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಆಶ್ರಮಗಳ ಪರಿಕಲ್ಪನೆಯೇ ಇಲ್ಲದ ಸಮಾಜ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ತನಲ್ ಸಂಸ್ಥೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆಶ್ರಮ ಭೇಟಿ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.

ಕಾಲೇಜಿನ ಆಡಳಿತಾಧಿಕಾರಿ ಹಮೀದ್ ಮಾತನಾಡಿ, ಮೌಲ್ಯಾಧಾರಿತ ಶಿಕ್ಷಣದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಆಶ್ರಮಗಳಿಗೆ ಭೇಟಿ ನೀಡಲಾಗುತ್ತಿದೆ. ಇದರಿಂದ ಹಿರಿಯರ ಬಗ್ಗೆ ಗೌರವ, ಸಂಬAಧಗಳ ಮಹತ್ವ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಆಶ್ರಮವಾಸಿಗಳೊಂದಿಗೆ ಉಭಯ ಕುಶಲೋಪರಿ ನಡೆಸಿ, ವಿವಿಧ ಸ್ಪರ್ಧೆಗಳು, ಹಾಡುಗಾರಿಕೆ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಆಶ್ರಮವಾಸಿಗಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿ ಅವರಿಗೆ ಸಂತಸದ ಕ್ಷಣಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು ೮೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ತನಲ್ ಸಂಸ್ಥೆಯ ಪ್ರತಿನಿಧಿಗಳಾದ ಅಶ್ರಫ್ ತ್ವಾಹಾ, ಪತ್ರಕರ್ತ ಅಬ್ದುಲ್ಲಾ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಮುಹೀನಾ ಉಪಸ್ಥಿತರಿದ್ದರು.