ಗೋಣಿಕೊಪ್ಪಲು. ಜು. ೨೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ, ಮುಂದೆ ಡಿ.ಕೆ. ಶಿವಕುಮಾರ್ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ದೊರೆತಲ್ಲಿ ಇಡೀ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿದೆ.
ಆದರೆ ಕೊಡಗು ಜಿಲ್ಲೆಯ ರೈತ ಸಂಘದ ಕೆಲವು ಮುಖಂಡರು ಇದನ್ನು ಸಹಿಸದೆ, ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ಸಿಗಬಾರದು ಎಂದು ಹೇಳಿಕೆಯನ್ನು ನೀಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ಹೇಳಿದರು.
ಗೋಣಿಕೊಪ್ಪಲಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಂಘವು ಬಿಜೆಪಿ ಪಕ್ಷದ ಏಜೆಂಟರಾಗಿ ಕೆಲಸ ನಿರ್ವಹಿಸುತ್ತಿರುವುದು ಬಯಲಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿAದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರನ್ನು ಸೋಲಿಸುವ ಹುನ್ನಾರ ನಡೆಸಿದ್ದರು ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ, ಮಾಯಮುಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ ಮಾತನಾಡಿ, ನೀಟ್ ಪರೀಕ್ಷೆಯ ಹಗರಣದಲ್ಲಿ ವಿದ್ಯಾರ್ಥಿಗಳ ಹಾಗೂ ಕಾಂಗ್ರೆಸ್ ಪಕ್ಷದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಿತು ಎಂದರು.
ಕೇಂದ್ರ ಸರ್ಕಾರ ರೈತರ ರಸಗೊಬ್ಬರಗಳಿಗೆ ದುಪ್ಪಟ್ಟು ಹಣವನ್ನು ಹೆಚ್ಚಿಸಿದೆ. ಈ ಬಗ್ಗೆ ರೈತರು ಧ್ವನಿ ಎತ್ತಬೇಕು ಎಂದು ಒತ್ತಾಯ ಮಾಡಿದರು. ಗೋಷ್ಠಿಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್ ಉಪಸ್ಥಿತರಿದ್ದರು.